ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಅವರ ಸಾವಿನ ಸುದ್ದಿ ಇಡೀ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಬಂದೋದಗಿದೆ. ಅದರೆ ಅಪ್ಪು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ನೇತ್ರಗಳನ್ನು ದಾನ ಮಾಡಲು ಕಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಪುನೀತ್ ಅಪ್ಪನ ಹಾದಿಯಲ್ಲಿಯೇ ಸಾಗಿದ್ದಾರೆ.
46 ವರ್ಷದ ಸ್ಯಾಂಡಲ್ ವುಡ್ ನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ನಟರು-ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಪುನೀತ್ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆಘಾತವಾಗಿದೆ. ಪುನೀತ್ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.
ಪುನೀತ್ ನಿವಾಸಕ್ಕೆ ಬಿಗಿ ಭದ್ರತೆ:
ಪುನೀತ್ ರಾಜ್ ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಂಡೋಪತಂಡವಾಗಿ ಮನೆಯತ್ತ ಲಗ್ಗೆಯಿಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುನೀತ್ ಮನೆಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.
ನಟ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತವಾಗಿ ಆಸ್ಪತ್ರೆಗೆ ಬಂದಿದ್ದಾರೆ, ಇಂದು ಬೆಳಗ್ಗೆ 11.30ರ ಹೊತ್ತಿಗೆ ಅವರು ಆಸ್ಪತ್ರೆಗೆ ಬರುವಾಗಲೇ ಗಂಭೀರವಾಗಿದ್ದರು. ಅದಕ್ಕೆ ಮೊದಲು ಎದೆನೋವು ಕಾಣಿಸಿಕೊಂಡು ಬೇರೆ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದರು. ಐಸಿಯುನಲ್ಲಿ ಕೂಡಲೇ ಅವರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ನಮ್ಮಿಂದ ಬದುಕಿಸಲು ಸಾಧ್ಯವಾಗಿಲ್ಲ ಎಂದು ಆಸ್ಪತ್ರೆಯ ತಜ್ಞ ಡಾ ರಂಗನಾಥ್ ನಾಯಕ್ ತಿಳಿಸಿದ್ದಾರೆ. ಇಂದು ನಸುಕಿನ ಜಾವ ಜಿಮ್ ಗೆ ವರ್ಕೌಟ್ ಗೆ ಹೋಗಿದ್ದಾಗಲೇ ಪುನೀತ್ ಅವರಿಗೆ ತೀವ್ರ ಹೃದಯಾಘಾತವಾಗಿದೆ.
ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನ:
ಪುನೀತ್ ಅವರ ಮೃತದೇಹವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲು ಸರಕಾರ ನಿರ್ಧರಿಸಿದೆ.

