ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 70ನೇ ಶಿಕ್ಷಣ ಸಂಸ್ಥೆಯಾದ ವಿವೇಕಾನಂದ ಸಿಬಿಎಸ್ಇ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮವು ನ. 3ರಂದು ಬೆಳಗ್ಗೆ 11.45ಕ್ಕೆ ಪುತ್ತೂರು ನೆಹರೂನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ವಸಂತಿ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾದ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಕೆನರಾ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಯೋಗೀಶ್ ಆಚಾರ್ಯ ಪಾಲ್ಗೊಳ್ಳಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಹೊಸ ಅವಿಷ್ಕಾರಗಳಲ್ಲಿ ಸವಾಲುಗಳ ಕುರಿತು ವಿವಿಧ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಏರ್ಪಡಿಲಾದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. 3ಡಿ ಸಯನ್ಸ್ ಪಾರ್ಕ್, ಆಂಫಿ ಥಿಯೇಟರ್ ಮತ್ತು ಪ್ರಯೋಗಾಲಯಗಳ ಉದ್ಘಾಟನೆ ನೆರವೇರಲಿದೆ.

ಕೇಂದ್ರೀಯ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿರುವ ಈ ಹೊಸ ಶಿಕ್ಷಣ ಸಂಸ್ಥೆಯು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ ಎಂದರು.
ಶಾಲಾ ಆಡಳಿತ ಮಂಡಳಿ ಸಂಚಾಲಕ ಭರತ್ ಪೈ, ಸದಸ್ಯೆ ಶಂಕರಿ ಶರ್ಮ, ಮುಖ್ಯ ಶಿಕ್ಷಕಿ ಸಿಂಧೂ ಉಪಸ್ಥಿತರಿದ್ದರು.