Government employees strike ಪುತ್ತೂರು: ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಹಾಗೂ ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆಗಳನ್ನು ಪರಿಷ್ಕರಿಬೇಕು ಇಲ್ಲದಿದ್ದರೇ, ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದ್ದು ಇದಕ್ಕೆ ಪುತ್ತೂರು ತಾಲೂಕು ಘಟಕ ಬೆಂಬಲ ಸೂಚಿಸಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪುತ್ತೂರು ಅಧ್ಯಕ್ಷ ಶಿವಾನಂದ ಆಚಾರ್ಯ ಹೇಳಿದರು.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರಕಾರ ಈ ಕೂಡಲೇ ಬೇಡಿಕೆ ಈಡೇರಿಸದಿದ್ದರೇ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತುರಾಜ್ಯಕಾರ್ಯಕಾರಿಣಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.
ರಾಜ್ಯ ಸರ್ಕಾರ 2023-24 ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ- ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ. 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022 ಜುಲೈ 1 ರಿಂದ ಜಾರಿಗೊಳಿಸಬೇಕಿತ್ತು. ಸರ್ಕಾರ ಇದನ್ನು ಮಾಡದ ಹಿನ್ನಲೆಯಲ್ಲಿ ಫೆ.21ರಂದು ನೌಕರರ ಸಂಘದ ಜಿಲ್ಲೆ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷ ಪದಾಧಿಕಾರಿಗಳ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಭೆಯನ್ನು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ ಮಾಡಿದೆ ಎಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40 ಫಿಟ್ ಮೆಂಟ್ ಸೌಲಭ್ಯವನ್ನು 2022 ಜುಲೈ 1 ರಿಂದ ಜಾರಿಗೊಳಿಸಬೇಕು. ಎನ್. ಪಿ. ಎಸ್. ಯೋಜನೆಯಿಂದ ಸರ್ಕಾರಿ ನೌಕರರು ಜೀವನ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಎನ್. ಪಿ. ಎಸ್. ಯೋಜನೆಯನ್ನು ರದ್ದು ಮಾಡಿ ಓ. ಪಿ. ಎಸ್. ವ್ಯಾಪ್ತಿಗೆ ಆ ನೌಕರರನ್ನು ತರಬೇಕು. ಈ ಘೋಷಣೆ ಆಗುವ ತನಕ ಪುತ್ತೂರು ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ತುರ್ತು ಸೇವೆಯ ಹೊರತು ಪಡಿಸಿ ಡಿ ಯಿಂದ ಎ ದರ್ಜೆ ವರೆಗಿನ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಿದ್ದಾರೆ. ಸಾರ್ವಜನಿಕರಿಗೆ ಆಗುವ ತೊಂದರೆಗೆ ಸರ್ಕಾರ ಜವಾಬ್ದಾರಿಯಾಗಿರುತ್ತದೆ ಎಂದರು.
ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ., ಪುತ್ತೂರು ತಾಲೂಕು ಶಾಖೆಯ ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಕಾರ್ಯದರ್ಶಿ ಅಬ್ರಹಾಂ ಎಸ್. ಎ., ಉಪಾಧ್ಯಕ್ಷ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.