ಅಪರಾಧ
Mangalore-ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿ ಅಪಹರಣ: ₹35 ಲಕ್ಷ ಮೌಲ್ಯದ ಚಿನ್ನ ದರೋಡೆ; ಮಂಗಳೂರಿನಿಂದ ಕಾರಿನಲ್ಲಿ ಕರೆದೊಯ್ದು ಶಿರಸಿಯಲ್ಲಿ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
ಕಸ್ಟಮ್ಸ್ ಅಧಿಕಾರಿಗಳು ಎಂದು ನಂಬಿಸಿ, ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳ ತಂಡ, ಅವರಿಂದ ₹35 ಲಕ್ಷ ಮೌಲ್ಯದ 350 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿದೆ.
ಮಂಗಳೂರು: ನಾವು ಕಸ್ಟಮ್ಸ್ ಅಧಿಕಾರಿಗಳು ಎಂದು ನಂಬಿಸಿ, ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳ ತಂಡ, ಅವರಿಂದ ₹35 ಲಕ್ಷ ಮೌಲ್ಯದ 350 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿದೆ.
ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಆ. 13ರ ಬುಧವಾರ ಬೆಳಿಗ್ಗೆ ನಡೆದ ಈ ಘಟನೆ ತಡವಾಗಿ ವರದಿಯಾಗಿದೆ. ಕೇರಳ ನಿವಾಸಿ ಶ್ರೀಹರಿ ದರೋಡೆಗೊಳಗಾದವರು. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಘಟನೆಯ ವಿವರ:
ಕೇರಳದಿಂದ 350 ಗ್ರಾಂ ಚಿನ್ನದ ಗಟ್ಟಿಯೊಂದಿಗೆ ಶ್ರೀಹರಿ ಅವರು ಬುಧವಾರ ಬೆಳಿಗ್ಗೆ 7 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಿಲ್ದಾಣದಿಂದ ಹೊರಬಂದು ಸಮೀಪದ ಕೈರಲಿ ಹೋಟೆಲ್ ಬಳಿ ಆಟೋರಿಕ್ಷಾಗಾಗಿ ಕಾಯುತ್ತಿದ್ದಾಗ, ಬಿಎಚ್ (BH) ನೋಂದಣಿಯ ಇನೋವಾ ಕಾರಿನಲ್ಲಿ ಬಂದ ತಂಡವೊಂದು ಅವರನ್ನು ಅಡ್ಡಗಟ್ಟಿದೆ.
“ನಾವು ಕಸ್ಟಮ್ಸ್ ಅಧಿಕಾರಿಗಳು, ನಿಮ್ಮನ್ನು ತಪಾಸಣೆ ಮಾಡಬೇಕು” ಎಂದು ಹೇಳಿ ಕಾರು ಹತ್ತುವಂತೆ ಸೂಚಿಸಿದ್ದಾರೆ. ಶ್ರೀಹರಿ ನಿರಾಕರಿಸಿದಾಗ, ಅವರನ್ನು ಬಲವಂತವಾಗಿ ಕಾರಿನೊಳಗೆ ತಳ್ಳಿ, ಉಡುಪಿ ಮಾರ್ಗವಾಗಿ ಕುಮಟಾ-ಶಿರಸಿಯತ್ತ ಕರೆದೊಯ್ದಿದ್ದಾರೆ. ದಾರಿಮಧ್ಯೆ ಅವರಿಂದ ಚಿನ್ನವನ್ನು ಕಸಿದುಕೊಂಡು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಅಂತ್ರವಳ್ಳಿ ಎಂಬಲ್ಲಿ ಅವರನ್ನು ಕಾರಿನಿಂದ ಇಳಿಸಿ ಪರಾರಿಯಾಗಿದ್ದಾರೆ.
ಪರಿಚಿತರಿಂದಲೇ ಕೃತ್ಯದ ಶಂಕೆ:
ಘಟನೆಯಿಂದ ಆಘಾತಕ್ಕೊಳಗಾದ ಶ್ರೀಹರಿ, ಬಳಿಕ ಮಂಗಳೂರಿಗೆ ಹಿಂತಿರುಗಿ ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ವ್ಯಾಪಾರಿಯ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಇದ್ದವರೇ ಈ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಬಲವಾದ ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಕುರಿತು ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಎಚ್ ನೋಂದಣಿ ಕಾರು:
ದರೋಡೆಗೆ ಬಳಸಲಾದ ಇನೋವಾ ಕಾರು ‘ಬಿಎಚ್’ ಸರಣಿಯ ನೋಂದಣಿ ಸಂಖ್ಯೆ ಹೊಂದಿರುವುದು ತನಿಖೆಯಲ್ಲಿ ಕುತೂಹಲ ಮೂಡಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುವ ಕೇಂದ್ರ ಸರ್ಕಾರಿ ನೌಕರರು ಅಥವಾ ಉದ್ಯಮಿಗಳಿಗೆ ಈ ನೋಂದಣಿ ಸೌಲಭ್ಯವಿದ್ದು, ದರೋಡೆಕೋರರು ಪೊಲೀಸರನ್ನು ದಾರಿ ತಪ್ಪಿಸಲು ಈ ಮಾದರಿಯ ನಕಲಿ ನೋಂದಣಿ ಫಲಕ ಬಳಸಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


















