ರಾಜಕೀಯ
Siddaramaiah-ಸಚಿವರಿಗೆ ಸಿಎಂ ಔತಣಕೂಟ : ಸಚಿವ ಸಂಪುಟ ಪುನರ್ರಚನೆ ಸುಳಿವು : ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಔತಣಕೂಟ ರಾಜಕೀಯವಾಗಿ ಗಮನಾರ್ಹ ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ, ಗುತ್ತಿಗೆದಾರರ ಬಿಲ್ ಬಾಕಿ ವಿಷಯವೇ ಔತಣಕೂಟದ ಪ್ರಮುಖ ಚರ್ಚೆಯಾಗಿರಲಿದೆ ಎನ್ನಲಾಗಿದೆ. ಆದರೆ, ಇದರ ಮೂಲಕ ಸಂಪುಟ ಸಹೋದ್ಯೋಗಿಗಳಿಗೆ ಸಂದೇಶ ರವಾನಿಸುವ ಸಾಧ್ಯತೆಯೂ ಇದೆ ಎಂದು ಕಾಂಗ್ರೆಸ್‌ನ ಒಂದು ವರ್ಗ ತಿಳಿಸಿದೆ.
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಔತಣಕೂಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಕೂಟ ರಾಜಕೀಯವಾಗಿ ಗಮನಾರ್ಹ ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ, ಗುತ್ತಿಗೆದಾರರ ಬಿಲ್ ಬಾಕಿ ವಿಷಯವೇ ಔತಣಕೂಟದ ಪ್ರಮುಖ ಚರ್ಚೆಯಾಗಿರಲಿದೆ ಎನ್ನಲಾಗಿದೆ. ಆದರೆ, ಇದರ ಮೂಲಕ ಸಂಪುಟ ಸಹೋದ್ಯೋಗಿಗಳಿಗೆ ಸಂದೇಶ ರವಾನಿಸುವ ಸಾಧ್ಯತೆಯೂ ಇದೆ ಎಂದು ಕಾಂಗ್ರೆಸ್‌ನ ಒಂದು ವರ್ಗ ತಿಳಿಸಿದೆ.
ಸಂಪುಟ ಪುನಾರಚನೆಗೆ ಸದ್ಯಕ್ಕೆ ಚಿಂತನೆಯಿಲ್ಲ:
ಪ್ರಸ್ತುತ, ಸಂಪುಟ ಪುನಾರಚನೆಗೆ ಯಾವುದೇ ಯೋಜನೆ ಇಲ್ಲ. ಬಿಹಾರ ಚುನಾವಣೆಯತ್ತ ಎಲ್ಲರ ಗಮನವಿದ್ದು, ರಾಜ್ಯ ನಾಯಕರು ಅದರಲ್ಲಿ ಭಾಗಿಯಾಗಬೇಕಾಗಿದೆ. ಆದರೆ, ಗುತ್ತಿಗೆದಾರರ ಬಿಲ್ ಬಾಕಿ ಸಮಸ್ಯೆ ಪ್ರತಿಪಕ್ಷಗಳಿಗೆ ರಾಜಕೀಯ ಅಸ್ತ್ರವಾಗಿದೆ. ಹಣಕಾಸು ಇಲಾಖೆಯ ಪ್ರಗತಿ ಪರಿಶೀಲನೆ, ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರಲಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಚರ್ಚೆಯ ಸಂಭಾವ್ಯ ವಿಷಯಗಳು:
ಗುತ್ತಿಗೆದಾರರ ಬಿಲ್ ಬಾಕಿ ತೀರಿಸಲು ತಕ್ಷಣ ಕ್ರಮಕ್ಕೆ ಸೂಚನೆ.
ಸರ್ಕಾರದ 2.5 ವರ್ಷ ಪೂರೈಕೆ ಸಂದರ್ಭದಲ್ಲಿ ಸಂಪುಟದ ಕೆಲವರಿಗೆ ತ್ಯಾಗಕ್ಕೆ ಸಿದ್ಧತೆಗೆ ಸೂಚನೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಸ್ಥಳೀಯ ಚುನಾವಣೆಗೆ ಸಿದ್ಧತೆ.
ಜಿಎಸ್‌ಟಿ ಸುಧಾರಣೆಯಿಂದ ರಾಜ್ಯದ ಆರ್ಥಿಕತೆಯ ಮೇಲಿನ ಪರಿಣಾಮ.
ತ್ಯಾಗದ ಸಂದೇಶ?:
ಕಾಂಗ್ರೆಸ್‌ನ ಮತ್ತೊಂದು ವರ್ಗದ ಪ್ರಕಾರ, ಈ ಔತಣಕೂಟದಲ್ಲಿ ಸಂಪುಟ ಪುನಾರಚನೆಗೆ ಸಂಬಂಧಿಸಿದ ಸಂದೇಶ ನೀಡುವ ಸಾಧ್ಯತೆಯಿದೆ. ಪಕ್ಷದ ಹಿತದೃಷ್ಟಿಯಿಂದ ಕೆಲ ಸಚಿವರು ಸ್ಥಾನ ತ್ಯಜಿಸಿ, ಹಿರಿಯ ಶಾಸಕರಿಗೆ ಅವಕಾಶ ಕಲ್ಪಿಸಲು ಸಿದ್ಧರಾಗಬೇಕು ಎಂದು ಸೂಚಿಸಬಹುದು. ಈಗಾಗಲೇ ಮೂರು ಆಗಿರುವ ಶಾಸಕರಿಗೆ ಸಂಪುಟದಲ್ಲಿ ಸ್ಥಾನದ ಭರವಸೆ ನೀಡಲಾಗಿದೆ. ಇವರಲ್ಲಿ ಕೆಲವರು ತಮ್ಮ ಸಮುದಾಯದಲ್ಲಿ ಪ್ರಭಾವಿಗಳಾಗಿದ್ದಾರೆ.
ಮೌಲ್ಯಮಾಪನದ ಅಸ್ತ್ರ:
ಸಿದ್ದರಾಮಯ್ಯ ಅವರ ಮನವೊಲಿಕೆ ತಂತ್ರಕ್ಕೆ ಸಚಿವರು ಒಪ್ಪದಿದ್ದರೆ, ಕಳೆದ 2.5 ವರ್ಷಗಳ ಸಚಿವರ ಕಾರ್ಯಕ್ಷಮತೆಯ ‘ಪ್ರಗತಿ ಪತ್ರ’ ಆಧರಿಸಿ ಸಂಪುಟ ಸರ್ಜರಿ ಮಾಡುವ ಸಾಧ್ಯತೆಯಿದೆ. ಕೆಲವರ ವಿರುದ್ಧ ದೂರುಗಳಿದ್ದರೂ, ಈ ಸಂದರ್ಭದಲ್ಲಿ ಕೈಬಿಡುವುದರಿಂದ ಪಕ್ಷಕ್ಕೆ ಹಾನಿಯಾಗದು ಮತ್ತು ಪ್ರತಿಪಕ್ಷಗಳಿಗೆ ರಾಜಕೀಯ ಅಸ್ತ್ರ ಸಿಗದು ಎಂದು ಚರ್ಚೆಯಾಗುತ್ತಿದೆ.
ಇಂದು ಬಾಗಲಕೋಟೆಗೆ ಸಿಎಂ
ಅಕ್ಟೋಬರ್ 13ರಂದು ಬೆಳಿಗ್ಗೆ 10ಕ್ಕೆ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ವಿಶೇಷ ವಿಮಾನದಲ್ಲಿ ತೆರಳಿ, ಬಾಗಲಕೋಟೆಯ ಬಂಡಿಗಣಿ ಮಠದಲ್ಲಿ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:30ಕ್ಕೆ ಬೆಂಗಳೂರಿಗೆ ಹಿಂದಿರುಗಿ, ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಡಿಸೆಂಬರ್‌ನಲ್ಲಿ ಸಂಪುಟ ಸರ್ಜರಿ.?:
ಮುಖ್ಯಮಂತ್ರಿ ಮತ್ತು ಕೆಲ ನಾಯಕರು ಡಿಸೆಂಬರ್‌ನಲ್ಲಿ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಸೂಚನೆ ನೀಡಿದ್ದಾರೆ. “ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವವರೆಗೆ ನನಗೆ ಸಂಪುಟದಲ್ಲಿ ಸ್ಥಾನ ಸಿಗದು” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಅಕ್ಟೋಬರ್ 13: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಅಂತರ ರಾಜ್ಯ
CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.
ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
-
ಸುಳ್ಯ19 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ22 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ23 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ19 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ24 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಬಿಗ್ ನ್ಯೂಸ್23 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
-
ಅಂತರ ರಾಜ್ಯ23 hours agoWhatsApp-ವಾಟ್ಸಾಪ್ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!
-
ಸ್ಥಳೀಯ17 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು















