ರಾಜಕೀಯ
Ashok Rai-ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಮಾಸಿಕಸಭೆ; ನಾನು ಬಿಜೆಪಿಯಲ್ಲಿರುವಾಗಲೇ ಬಡ ಮುಸ್ಲಿಂ ಮಹಿಳೆಯರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೆ: ಶಾಸಕ ಅಶೋಕ್ ರೈ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಅಲ್ಪಂಖ್ಯಾತ ಘಟಕದ ಮಾಸಿಕ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು.
ಪುತ್ತೂರು: ನಾನು ನನ್ನ ರಾಜಕೀಯ ಜೀವನಕ್ಕೆ ಕಾಲಿಡುವ ಮೊದಲು ಮತ್ತು ಅದರ ನಂತರ ಯಾವುದೇ ಜಾತಿ, ಧರ್ಮದವರಿಗೆ ನೋವು ತರುವ ಕೆಲಸ ಬಿಡಿ ಯಾರ ಮನಸ್ಸಿಗೂ ನೋವು ತರುವ ಹೇಳಿಕೆ ಅಥವ ಭಾಷಣ ಮಾಡಿಲ್ಲ. ಶಾಸಕನಾದ ಬಳಿಕ ಎಲ್ಲಾ ಜಾತಿ , ಧರ್ಮದವರನ್ನೂ ಸಮಾನವಾಗಿ ಕಾಣುತ್ತಿದ್ದೇನೆ, ನಾನು ಶಾಸಕನಾಗುವ ಹಿಂದೆ ಬಿಜೆಪಿಯಲ್ಲಿರುವಾಗಲೇ ನನ್ನ ಟ್ರಸ್ಟ್ ಮೂಲಕ ಅನೇಕ ಬಡ ಮುಸ್ಲಿಂ ಮಹಿಳೆಯರಿಗೆ ಮನೆಯನ್ನು ನಿರ್ಮಾಣ ಮಡಿಕೊಟ್ಟಿದ್ದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಅಲ್ಪಂಖ್ಯಾತ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು.
ಪಕ್ಷದವರೇ ಆದ ಕೆಲವರು ತೆರೆಮರೆಯಲ್ಲಿ ಕುಳಿತು ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂಬಾಗಿಲ ಮೂಲಕ ಮಾಡುವ ಮಿಥ್ಯಾರೋಪಗಳಿಗೆ ಬೆಲೆ ಕೊಡುವ ವ್ಯಕ್ತಿ ನಾನಲ್ಲ ನನ್ನದು ಏನಿದ್ದರೂ ತೆರೆದ ಹೃದಯ, ಇದ್ದದ್ದನ್ನು ಇದ್ದ ಹಾಗೆ ಧೈರ್ಯದಿಂದ ಎಲ್ಲಿಬೇಕಾದರೂ ಹೇಳುವ ಮನಸ್ಸು ನನ್ನದಾಗಿದೆ. ಇದುವರೆಗೂ ಯಾರಿಗೂ ಗೊತ್ತಿದ್ದು ಅನ್ಯಾಯ ಮಾಡಿಲ್ಲ. ನನ್ನ ಬಗ್ಗೆ ತೆರೆಮರೆಯಲ್ಲಿ ಕುಳಿತು ಆರೋಪ ಮಾಡುವವರು ಅವರ ಸಮುದಾಯಕ್ಕೆ, ಸಮುದಾಯದ ಬಡ ಕುಟುಂಬಗಳಿಗೆ ಎನು ಮಾಡಿದ್ದಾರೆ ಎಂಬುದನ್ನು ಅವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
ಗುಂಡು ಹಾಕಿ ಎಂಬ ಹೇಳಿಕೆ ಕೊಟ್ಟಿದ್ದು ಹೌದು:
ಕಳೆದ ಕೆಲವು ದಿನಗಳ ಹಿಂದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕೇರಳದ ವ್ಯಕ್ತಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ, ಸ್ಥಳಕ್ಕೆ ನಾನು ಭೇಟಿ ನೀಡಿದ್ದೆ, ಪೊಲೀಸರ ಗುಂಡಿಗೆ ಗಾಯಗೊಂಡ ಆರೋಪಿ ಕೇರಳದ ದನ ವ್ಯಾಪಾರಿ, ಆತ 5 ಬಾರಿ ದನ ಸಾಗಾಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. 5 ಬಾರಿಯೂ ಇವನಿಗೆ ಎಚ್ಚರಿಕೆ ಕೊಡಲಾಗಿತ್ತು. ಆ ಬಳಿಕವೂ ಸಾಗಾಟ ಮಾಡಿದ್ದಾನೆ, ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗುವ ವೇಳೆ ಗುಂಡು ಹಾಕಿದ್ದಾರೆ. ಇನ್ನು ಕದ್ದು ದನ ಸಾಗಾಟ ಮಾಡಿದರೆ ಬೇರೆ ಕಡೆ ಗುಂಡು ಬೀಳ್ತದೆ ಎಂದು ಹೇಳಿದ್ದೆ. ಕೇರಳದ ವ್ಯಕ್ತಿ ಬಂದು ಇಲ್ಲಿ ದನ ಕದ್ದು ಸಿಕ್ಕಿ ಬಿದ್ದಾಗ ಬೈಯ್ಯುವುದು ಇಲ್ಲಿನ ಮುಸ್ಲಿಮರಿಗೆ . ಒಬ್ಬ ವ್ಯಕ್ತಿ ಮಾಡುವ ತಪ್ಪಿಗೆ ಇಡೀ ಸಮಾಜವನ್ನೇ ದೂಷಣೆ ಮಾಡಿದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಸಮುದಾಯದಲ್ಲಿ ಕೆಟ್ಟವರೂ ಇದ್ದಾರೆ ಒಳ್ಳೆಯವರೂ ಇದ್ದಾರೆ. ಕೆಟ್ಟ ಒಬ್ಬ ವ್ಯಕ್ತಿಯ ಕಾರಣಕ್ಕೆ ಯಾರೂ ಸಮಾಜವನ್ನು ದೂಷಿಸಬಾರದು ಎಂದು ಹೇಳಿದರು.
ಜಿಲ್ಲೆಯ ಮುಸ್ಲಿಮರ ಬಗ್ಗೆ ನನಗೆ ಅಭಿಮಾನವಿದೆ
ದ ಕ ಜಿಲ್ಲೆಯ ಮುಸ್ಲಿಮರ ಬಗ್ಗೆ ನನಗೆ ಅಭಿಮಾನವಿದೆ. ಒಂದು ಕಾರ್ಯಕ್ರಮಕ್ಕೆ ಕರೆದರೆ ಅಲ್ಲಿಗೆ ತೆರಳಿದರೆ ಅವರು ಮಾಡುವ ಅತಿಥ್ಯ ಅತ್ಯಂತ ಗೌರವದಿಂದ ಕೂಡಿರುತ್ತದೆ. ಬಹಳ ಪ್ರೀತಿಯಿಂದ ನಡೆಸಿಕೊಳ್ಳುತ್ತಾರೆ. ಒಂದು ಕಾರ್ಯಕ್ರಮಕ್ಕೆ ಕರೆದರೆ ನನಗೆ ಮಾತ್ರವಲ್ಲ ಅನ್ಯಧರ್ಮದ ಯಾರೇ ಆಗಲಿ ಅವರನ್ನು ಅತ್ಯಂತ ಪ್ರೀತಿಯಿಂದ ಸ್ವಾಗತ ಮಾಡುತ್ತಾರೆ. ಇಂಥಹ ವ್ಯಕ್ತಿಗಳನ್ನು ಯಾರೋ ಒಬ್ಬನ ಕಾರಣಕ್ಕೆ ಅಪಮಾನ ಮಾಡುವುದು ಎಷ್ಟು ಸರಿ? ಇದೇ ಕಾರಣಕ್ಕೆ ನಾನು ದನಕಳ್ಳರ ವಿರುದ್ದವಾಗಿ ಹೇಳಿಕೆ ಕೊಟ್ಟಿದ್ದೇನೆ, ಮುಸ್ಲಿಮರ ಮೇಲೆ ಗುಂಡು ಹಾರಿಸಿ ಎಂದು ಹೇಳಿದ್ದೇನಾ? ಎಂದು ಶಾಸಕರು ಪ್ರಶ್ನಿಸಿದರು. ಅಲ್ಪ ಸಂಖ್ಯಾತ ಸಮುದಾಯದಲ್ಲಿ ಅನೆಕ ಮಂದಿ ಬಡ ವಿಧವೆಯರಿದ್ದಾರೆ, ಮನೆ ಇಲ್ಲದವರಿದ್ದಾರೆ, ಅವರಿಗೆ ನೆರವು ನೀಡುವ ಬಗ್ಗೆ ಚಿಂತನೆ ಮಾಡಬೇಕಿದೆ. ಬ್ಯಾಂಕಿನಿಂದದ ಸಾಲ ಪಡೆದು ಮರುಪಾವತಿ ಸಾಧ್ಯವಿಲ್ಲದ ಕೆಲವು ಬಡ ಕುಟುಂಬಗಳು ನನ್ನ ಕಚೇರಿಗೆ ಬಂದು ತ್ಮ ಸಂಕಷ್ಟಗಳನ್ನು ಹೇಳಿಕೊಳ್ಳುತ್ತಾರೆ ನನ್ನಿಂದಾಯ ನೆರವನ್ನು ನೀಡಿದ್ದೇನೆ, ಈ ಬಗ್ಗೆ ನಾಯಕರು ಮೌನ ಮುರಿಯಬೇಕು ಎಂದು ಶಾಸಕರು ಮನವಿ ಮಾಡಿದರು.
ಕಾಂಗ್ರೆಸ್ನ ಬೆನ್ನಲುಬು ಎಂದೇ ನೆರವು ನೀಡುತ್ತಿದ್ದೇನೆ
ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ನ ವೋಟು ಬ್ಯಾಂಕ್ ಎಂದು ನನಗೆ ಚೆನ್ನಾಗಿ ಗೊತ್ತಿದೆ. ಅಲ್ಪಸಂಖ್ಯಾತರು ನನಗೆ ಮತ ಹಾಕಿದ್ದಾರೆ ಎಂದೂ ಗೊತ್ತಿದೆ ಇದೇ ಕಾರಣಕ್ಕೆ ನನ್ನಿಂದ ಏನೆಲ್ಲಾ ಸಹಾಯ ಮತ್ತು ಆ ಸಮುದಾಯಗಳಿಗೆ ಸರಕಾರದಿಂದ ಎಷ್ಟು ಅನುದಾನ ತರ್ಲಿಕ್ಕೆ ಸಾಧ್ಯವೋ ಅಷ್ಟು ಅನುದಾನವನ್ನು ತಂದಿದ್ದೇನೆ. ಕಳೆದ ವರ್ಷ8 ಕೋಟಿ ಅಲ್ಪ ಸಂಖ್ಯಾತ ಸಮುದಾಯಕ್ಕೆ, ಜೈನ ಸಮುದಾಯಕ್ಕೆ, ಕ್ರೈಸ್ತ ಸಮುದಾಯಕ್ಕೆ ಮೀಸಲಿಟ್ಟಿದ್ದೇನೆ ಈ ವರ್ಷ 9 ಕೋಟಿ ಅನುದಾನದ ಪ್ರಸ್ತಾವನೆಯನ್ನು ಕಳುಹಿಸಿದ್ದೇನೆ, ಮಸೀದಿ, ಚರ್ಚ್, ಬಸದಿಗಳ ಅಭಿವೃದ್ದಿಗೆ ಅನುದಾನ ನೀಡಿದ್ದೇನೆ, ನನ್ನ ಕ್ಷೇತ್ರದ ಮತ್ತು ನನ್ನ ಪಕ್ಕದ ಕ್ಷೇತ್ರದ ಬಡ ಕುಟುಮಬಗಳಿಗೆ ಸಿ ಎಂ ಪರಿಹಾರ ನಿಧಿಯಿಂದ ಆರ್ಥಿಕ ನೆರವನ್ನು ಒದಗಿಸಿದ್ದೇನೆ, ನನ್ನ ಕಚೇರಿಗೆ ಬಂದ ಅದೆಷ್ಟೋ ಕುಟುಂಬಗಳಿಗೆ ನನ್ನಿಂದಾದ ಆರ್ಥಿಕ ನೆರವು ಮಾಡಿದ್ದೇನೆ. ಇಷ್ಟು ವರ್ಷ ಮಾಡದೇ ಇದ್ದ , ಆಗದೇ ಇದ್ದ 94ಸಿ ಸಿ, 94 ಸಿ ಹಕ್ಕು ಪತ್ರವನ್ನು ಮಾಡಿಕೊಟ್ಟಿದ್ದೇನೆ, ಮದುವೆ, ವಿದ್ಯಾಬ್ಯಾಸಕ್ಕೆ ನೆರವು ನೀಡಿದ್ದೇನೆ. ಸರಕಾರದಿಂದ ದೊರೆಯುವ ಟೈಲರಿಂಗ್ ಯಂತ್ರ, ಕಾರ್ಮಿಕ ಕಿಟ್ಗಳನ್ನು ಅಲ್ಪಸಂಖ್ಯಾತ ಮಹಿಳೆಯರಿಗೆ ನೀಡಿದ್ದೇನೆ. ಇವೆಲ್ಲವೂ ತನ್ನಿಂತನೆ ಬರುವುದಲ್ಲ ಸರಕಾರವನ್ನು ಕಾಡಿಬೇಡಿ ತಂದು ಕೊಟ್ಟಿದ್ದೇನೆ ಎಂದು ಶಾಸಕರು ಹೇಳಿದರು.
ಬಹುತೇಕರಿಗೆ ಕಾಂಗ್ರೆಸ್ಸಿನ ನೆರಳು ಮಾತ್ರ ದೊರಯುತ್ತದೆ
ಕಾಂಗ್ರೆಸ್ ಒಂದು ಮರವಿದ್ದಂತೆ, ಇದರಲ್ಲಿ ಆಗುವ ಹಣ್ಣುಗಳು ಕೆಲವರಿಗೆ ಮಾತ್ರ ದೊರೆಯುತ್ತದೆ, ಉಳಿದವರಿಗೆ ನೆರಳು ಸಿಗಬಹುದು. ಪಕ್ಷ ಅಧಿಕಾರದಲ್ಲಿದ್ದರೆ ನೆರಳಿನಡಿ ನಿಂತು ತಮ್ಮ ಕೆಲಸ ಮಾಡಿಸಬಹುದು, ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದ ಶಾಸಕರು. ನಮ್ಮ ಪಕ್ಷದ ಶಾಸಕರು ಇದ್ದಾಗ ನಮಗೆ ಕಷ್ಟವಾದಾಗ ಸಹಾಯವನ್ನು ಪಡೆಯಬಹುದು, ಅಧಿಕಾರಿಗಳಿಂದ ಕೆಲಸ ಮಾಡಿಸಬಹುದು ಎಂಬುದನ್ನು ಪ್ರತೀಯೊಬ್ಬ ಕಾರ್ಯಕರ್ತರೂ ಅರ್ಥ ಮಾಡಿಕೊಳ್ಳಬೇಕು. ಪಕ್ಷ ಇದ್ದರೆ, ಪಕ್ಷ ಅಭಿವೃದ್ದಿಯಾದರೆ ಮತ್ರ ನಮಗೆಲ್ಲಾ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಪಕ್ಷ ಇದ್ದರೆ ಮಾತ್ರ ನಾವು , ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕನಾಗಲು ಅಶೋಕ್ ರೈಗೂ ಸಾಧ್ಯವಿಲ್ಲ ಎಂಬುದು ಜನಜನಿತ ಎಂದು ಶಾಸಕರು ಹೇಳಿದರು.
ಶಾಸಕರು ನಮ್ಮ ಪರವಾಗಿಯೇ ಇದ್ದಾರೆ: ಕೆ ಪಿ ಆಳ್ವ
ಶಾಸಕ ಅಶೋಕ್ ರೈ ಎಂದೂ ಅಲ್ಪಸಂಖ್ಯಾತರ ಪರವಾಗಿದ್ದಾರೆ, ಅವರನ್ನು ಕೆಲವು ದುಷ್ಟ ಶಕ್ತಿಗಳು ಅವರ ಬಗ್ಗೆ ಇಲ್ಲದ ಆರೋಪವನ್ನು ಮಾಡಿ ಅದನ್ನು ಸಮಾಜಿಕ ತಾಣದಲ್ಲಿ ಹಾಕುತ್ತಿದ್ದಾರೆ, ಇದಕ್ಕೆ ಕಾರ್ಯಕರ್ತರೇ ತಕ್ಕ ಉತ್ತರವನ್ನು ಕೊಡಬೇಕು. ಒಬ್ಬರು ಅಥವಾ ಇಬ್ಬರಿಂದ ಇಲ್ಲಿ ಪಕ್ಷ ಕಟ್ಟಲು ಸಾಧ್ಯವಿಲ್ಲ. ನಮ್ಮ ಪಕ್ಷದವರೇ ಶಾಸಕರಾದ ಕಾರಣ ಇಲ್ಲಿ ಪಕ್ಷವನ್ನು ಬಲಿಷ್ಟವಾಗಿ ಕಟ್ಟಲು ಸುಲಭ ಸಾಧ್ಯವಾಗುತ್ತದೆ. ಪುತ್ತೂರಿನಲ್ಲಿ ಬಿಜೆಪಿ ಶಾಸಕರಿದ್ದಲ್ಲಿ ಅಲ್ಪಸಮಖ್ಯಾತರ ಯಾವುದೇ ಕೆಲಸಗಳು ಆಗುವುದಿಲ್ಲ, ಅಲ್ಪ ಸಂಖ್ಯಾತರ ಅನುದಾನವೂ ಬರುವುದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾತ್ರ ಎಲ್ಲಾ ಜಾತಿ, ಧರ್ಮದವರ ಏಳಿಗೆ ಕಾಣಲು ಸಾಧ್ಯ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಶಾಸಕ ಅಶೋಕ್ ರೈ ಮಾರ್ಗದರ್ಶನದಂತೆ ನಾವು ನಡೆದುಕೊಳ್ಳಬೇಕಿದೆ. ಪುತ್ತೂರಿಗೆ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಭವನಕ್ಕೆ ಜಾಗ ಮಂಜೂರಾಗಿದೆ ಇದು ಇತಿಹಾಸವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಕಟ್ಟಿ ಬೆಳಸಬೇಕಿದೆ. ಯಾರೋ ಒಂದಿಬ್ಬರು ಕಿಡಿಗೇಡಿಗಳ ಮಾತಿಗೆ ಬೆಲೆ ಕೊಟ್ಟು ಪಕ್ಷದ ನಾಯಕರನ್ನು ಅವಹೇಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ ಮನವಿ ಮಾಡಿದರು.
ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಸೇವಾ ದಳದ ಜೋಕಿಂಡಿಸೋಜಾ, ಇಬ್ರಾಹಿಂ ಗೋಳಿಕಟ್ಟೆ, ಯಾಕೂಬ್ಮುಲಾರ್, ರಾಮಣ್ಣ ಪಿಲಿಂಜ, ಅಬೂಬಕ್ಕರ್ ಆರ್ಲಪದವು, ಫಾರೂಕ್ ಬಾಯಬ್ಬೆ, ಪುಡಾ ಸದಸ್ಯ ಅನ್ವರ್ ಖಾಸಿಂ ಅರ್ಷದ್ ದರ್ಬೆ, ಸಿಯಾನ್ ದರ್ಬೆ, ಸೂಫಿ ಬಪ್ಪಳಿಗೆ, ಹಬೀಬ್ ಕಣ್ಣೂರು ತಿಂಗಳಾಡಿ, ಶರೀಫ್ ಬಲ್ನಾಡು, ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಬೂಬಕ್ಕರ್ ಆರ್ಲಪದವು ಅವರನ್ನು ಘಟಕದ ವತಿಯಿಂದ ಶಾಕರು ಸನ್ಮಾನಿಸಿ ಗೌರವಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.















