ಮಂಗಳೂರು
Padmaraj R. Poojari-ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ; ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ; ಹಿರಿಯ ಮುಖಂಡ ಜನಾರ್ದನ ಪೂಜಾರಿ ಸಮ್ಮುಖದಲ್ಲಿ ನೂತನ ಸಾರಥಿಯಾಗಿ ಅಧಿಕಾರ ಸ್ವೀಕಾರ
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮಾತನಾಡಿದರು.
ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಗೌರವ ಮತ್ತು ಶಕ್ತಿ ತುಂಬುವ ಮೂಲಕ ಬೂತ್ ಮಟ್ಟದಿಂದ ಪಕ್ಷವನ್ನು ಮರುಸಂಘಟಿಸಲಾಗುವುದು.
ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಗತವೈಭವವನ್ನು ಮರುಕಳಿಸುವಂತೆ ಶ್ರಮಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಘೋಷಿಸಿದರು.
ಗುರುವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ನವೆಂಬರ್ನಲ್ಲಿ ಬೃಹತ್ ಸಮಾವೇಶ:
ತಮ್ಮ ಮುಂದಿನ ಕಾರ್ಯಯೋಜನೆಗಳನ್ನು ಹಂಚಿಕೊಂಡ ಪದ್ಮರಾಜ್, ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷದ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಕಾರ್ಯಕರ್ತರ ನಿರೀಕ್ಷೆ ಹುಸಿಯಾಗದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಮುಂದಿನ 8 ದಿನಗಳಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಬೂತ್ಗಳಿಗೆ ಖುದ್ದಾಗಿ ಭೇಟಿ ನೀಡಿ, ಬೂತ್ ಅಧ್ಯಕ್ಷರು ಹಾಗೂ ಸ್ಥಳೀಯ ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗಿ ಅವರ ಶ್ರಮವನ್ನು ಗುರುತಿಸಿ ಬೆನ್ನಿಗೆ ನಿಲ್ಲಲಿದ್ದೇನೆ. ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿ ಸೂಕ್ತ ವೇದಿಕೆ ಕಲ್ಪಿಸಲು ನವೆಂಬರ್ ಮೊದಲ ವಾರದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದು, ಎಂದು ತಿಳಿಸಿದರು.
- ತುಳು ಭಾಷೆಗೆ ಮಾನ್ಯತೆ ಕಾಂಗ್ರೆಸ್ ಹೆಗ್ಗಳಿಕೆ:
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ 32,000 ಕೋಟಿ ಅನುದಾನ ಮೀಸಲಿಟ್ಟಿರುವುದು ಪ್ರಮುಖ ಮೈಲಿಗಲ್ಲು. ಇದಕ್ಕಿಂತ ಹೆಚ್ಚಾಗಿ ಕರಾವಳಿಯ ಬಹುಕಾಲದ ಕನಸಾದ ತುಳು ಭಾಷೆಗೆ ಎರಡನೇ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ ನೀಡಿದ ಐತಿಹಾಸಿಕ ಹೆಗ್ಗಳಿಕೆ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಈ ಸಾಧನೆಗಳನ್ನು ಪ್ರತಿಯೊಂದು ಮನೆ-ಮನಗಳಿಗೆ ತಲುಪಿಸಲಾಗುವುದು. ಕಾಂಗ್ರೆಸ್ ಸರ್ಕಾರವು ಕಾರ್ಯಕರ್ತರು ತಲೆ ಎತ್ತಿ ನಿಲ್ಲುವಂತಹ ಆಡಳಿತ ನೀಡುತ್ತಿದ್ದು, ವಿಪಕ್ಷಗಳ ಟೀಕೆಗೆ ಹಿಂಜರಿಯದೆ, ಹೊಗಳಿಕೆಗೆ ಹಿಗ್ಗದೆ ಮುನ್ನಡೆಯಬೇಕು. ಬಿಜೆಪಿ ಆಡಳಿತದಿಂದ ಬೇಸತ್ತು ಮರಳಿ ಕಾಂಗ್ರೆಸ್ಗೆ ಬರುತ್ತಿರುವ ಮುಖಂಡರು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಬಲಪಡಿಸುತ್ತೇವೆ, ಎಂದರು. - ಎಲ್ಲ ಕ್ಷೇತ್ರಗಳಲ್ಲೂ ಗೆಲುವಿನ ಗುರಿ ಎಲ್ಲರ ಹೊಣೆ: ಹರೀಶ್ ಕುಮಾರ್
ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಮ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ಪದ್ಮರಾಜ್ ವಿದ್ಯಾರ್ಥಿ ದೆಸೆಯಿಂದಲೇ ಪಕ್ಷಕ್ಕಾಗಿ ದುಡಿದವರು. ಕಳೆದ ಎರಡೂವರೆ ವರ್ಷಗಳಲ್ಲಿ ಪ್ರತಿ ಬ್ಲಾಕ್ಗೆ ಭೇಟಿ ನೀಡಿ ಪಕ್ಷ ಕಟ್ಟಿದ ಪರಿಣಾಮ ಇಂದು ಕಾರ್ಯಕರ್ತರಿಂದಲೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೊಡ್ಡ ಜವಾಬ್ದಾರಿ ನಿರ್ವಹಿಸುವಾಗ ಮಾತೃ ಹೃದಯದ ಮಮತೆಯೂ ಬೇಕು, ಸಂಘಟನೆಯ ಹಿತದೃಷ್ಟಿಯಿಂದ ವಜ್ರದಂತಹ ಕಠೋರ ನಿರ್ಧಾರಗಳೂ ಅನಿವಾರ್ಯ. ನಮ್ಮೊಳಗಿನ ಒಡಕಿನಿಂದಲೇ ನಮಗೆ ಹಿನ್ನಡೆಯಾಗಿದ್ದು, ಇನ್ನು ಮುಂದೆ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಪ್ರತಿಯೊಬ್ಬರೂ ಸೈನಿಕನಂತೆ ಶ್ರಮಿಸಬೇಕು. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವುದು ಕೇವಲ ಅಧ್ಯಕ್ಷರೊಬ್ಬರ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ಕಾಂಗ್ರೆಸಿಗನ ಕರ್ತವ್ಯ, ಎಂದು ಕರೆ ನೀಡಿದರು. - ಪಕ್ಷದ ಹುದ್ದೆಗಳು ’ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗದಿರಲಿ: ಮಂಜುನಾಥ ಭಂಡಾರಿ
ನೂತನ ಅಧ್ಯಕ್ಷರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸಂಘಟನ್ ಸೃಜನ್ ಅಭಿಯಾನದಡಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಚುನಾವಣೆ ಮೂಲಕ ಪದ್ಮರಾಜ್ ಅವರ ಆಯ್ಕೆ ನಡೆದಿದೆ. ಪಕ್ಷದಲ್ಲಿ ನೀಡಲಾಗುವ ಹುದ್ದೆಗಳು ಕೇವಲ ‘ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗಬಾರದು; ಸಕ್ರಿಯವಾಗಿ ದುಡಿಯುವವರಿಗೆ ಮಾತ್ರ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಕೆಪಿಸಿಸಿಯಲ್ಲಿ ಕಾರ್ಯದರ್ಶಿಗಳು ಹಾಗೂ ಸಂಯೋಜಕರ ನೇಮಕಕ್ಕೆ ಮುಕ್ತ ಅರ್ಜಿ ಆಹ್ವಾನಿಸಲಾಗಿದ್ದು, ಡಾ.ಜಿ. ಪರಮೇಶ್ವರ್ ನೇತೃತ್ವದ ಸಮಿತಿಯು ಸಂದರ್ಶನ ನಡೆಸಿ ಕ್ರಿಯಾಶೀಲರಿಗೆ ಮಾತ್ರ ಹೊಣೆಗಾರಿಕೆ ವಹಿಸಲಿದೆ. ಜಿಲ್ಲೆಯಲ್ಲಿ ಗ್ರಾ.ಪಂ., ತಾ.ಪಂ., ಜಿ.ಪಂ. ಹಾಗೂ ಪಾಲಿಕೆ ಚುನಾವಣೆಗಳು ಬಾಕಿ ಇದ್ದು, ಸುಮಾರು 4,000 ಜನಪ್ರತಿನಿಧಿ ಸ್ಥಾನಗಳು ಖಾಲಿಯಿವೆ. ವಷಾರ್ಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ಮುಂದಿನ ಆರು ತಿಂಗಳು ಸಂಘಟನೆಗೆ ಅತ್ಯಂತ ನಿರ್ಣಾಯಕ. ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಕಂಕಣಬದ್ಧರಾಗಬೇಕು, ಎಂದರು. - ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು.
- ಕಾರ್ಯಕ್ರಮದಲ್ಲಿ ಫಾ.ಗೋಮ್ಸ್ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಪ್ರಮುಖ ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ಟಿ.ಎಂ. ಶಾಹೀದ್ ತೆಕ್ಕಿಲ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಅಪ್ಪಿ, ಶಶಿಧರ ಹೆಗ್ಡೆ, ಅಶ್ರಫ್ ಕೆ., ಸುರೇಶ್ ಬಲ್ಲಾಳ್, ಕೃಷ್ಣಪ್ಪ, ಎಂ.ಎಸ್. ಮೊಹಮ್ಮದ್, ಸದಾಶಿವ ಉಳ್ಳಾಲ್, ಉಷಾ ಅಂಚನ್, ಶಾಹುಲ್ ಹಮೀದ್, ಈಶ್ವರ್ ಉಳ್ಳಾಲ್, ಮಹಮ್ಮದ್ ಆಲಿ, ಜೋಕಿಂ, ನವಾಝ್, ಎ.ಸಿ. ಭಂಡಾರಿ, ಲಾವಣ್ಯ ಬಲ್ಲಾಳ್, ಯು.ಕೆ. ಮೋನು ಮೊದಲಾದ ನಾಯಕರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷ ಪದ್ಮರಾಜ್ ಅವರ ತಂದೆ ಎಚ್.ಎಂ. ರಾಮಯ್ಯ ಹಾಗೂ ಸಹೋದರ ಡಾ. ಪುರುಷೋತ್ತಮ್ ಉಪಸ್ಥಿತರಿದ್ದು ಶುಭ ಕೋರಿದರು.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ23 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ21 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ22 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ22 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ















