ರಾಜಕೀಯ
ವಿಜಯೇಂದ್ರ ಪಟ್ಟಾಭಿಷೇಕ : ಹಬ್ಬದ ಸಂಭ್ರಮಾಚರಣೆಯಲ್ಲಿ ಯಡಿಯೂರಪ್ಪ ಬಳಗ – ಅಸಮಾಧಾನದಲ್ಲಿ ‘ಸಂತೋಷ’ ಕೂಟದ ಕೆಲವರು ಗೈರು – ಕಾಂಗ್ರೇಸ್ ಲೇವಡಿ
ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ.ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರ ಮಾಡಿದರು.
ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಅರಗ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.
ಪಕ್ಷ ಸಂಘಟನೆಗಾಗಿ ನಾವೆಲ್ಲ ವಿಜಯೇಂದ್ರ ಜತೆ ಇರುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲಲು ಸಿದ್ಧತೆ ನಡೆದಿದೆ. ಈಗಾಗಲೇ ಬಿ.ವೈ.ವಿಜಯೇಂದ್ರ ಪ್ರವಾಸ ಶುರು ಮಾಡಿದ್ದಾರೆ. ನಾವೆಲ್ಲ ಉತ್ಸಾಹದಿಂದ ಅವರ ಜತೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದರು.
ಸೋದರಿ ಅರುಣಾದೇವಿ ಸಂತಸ: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಖುಷಿ ತಂದಿದೆ ಎಂದು ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಸಹೋದರಿ ಅರುಣಾದೇವಿ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ತಂದೆ ಆ ಕಾಲದಲ್ಲೇ ಪಕ್ಷ ಸಂಘಟನೆಗಾಗಿ ಹೋರಾಟ ಮಾಡಿದ್ರು. ಈಗ ಬಿ.ವೈ.ವಿಜಯೇಂದ್ರಗೆ ಪಕ್ಷದ ನಾಯಕರು ಜವಾಬ್ದಾರಿ ನೀಡಿದ್ದಾರೆ. ರಾಜ್ಯದ ಜನರು ಬಿ.ವೈ.ವಿಜಯೇಂದ್ರ ಜೊತೆ ಇದ್ದಾರೆ. ವಿಜಯೇಂದ್ರ ಅಧಿಕಾರ ಸ್ವೀಕರಿಸ್ತಿರೋದು ಕುಂಟುಂಬದ ಸಂಭ್ರಮವಲ್ಲ. ಒಂದು ಸಮಾಜದ ಸಂಭ್ರಮ, ಪ್ರತಿಯೊಬ್ಬ ಕಾರ್ಯಕರ್ತರ ಸಂಭ್ರಮ ಎಂದರು.
ಕೆಲವರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯಪ್ರದೇಶ ಚುನಾವಣೆಯ ಪ್ರಚಾರದಲ್ಲಿರುವ ಸಿ.ಟಿ ರವಿ ಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.
ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ? ಸಂತೋಷ ಕೂಟಕ್ಕೆ ತೀವ್ರ ಅಸಮಾಧಾನ – ಕಾಂಗ್ರೇಸ್
ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ? ಬಿಜೆಪಿ ಪಕ್ಷ ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ..! ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ? ಎಂದು ಪ್ರಶ್ನಿಸಿದೆ.
ವಿಜಯೇಂದ್ರ ಒಬ್ಬನೇ ಎಲ್ಲವೂ ಅಲ್ಲ – ಈಶ್ವರಪ್ಪ
ವಿಜಯೇಂದ್ರ 3 ವರ್ಷ ಮಾತ್ರ ಅಧ್ಯಕ್ಷ – ಪೇಶ್ವೆ ಜೋಷಿಗಳು (ಕುಮಾರಸ್ವಾಮಿಯವರು ಕೊಟ್ಟ ಹೆಸರು!)
ವಿಜಯೇಂದ್ರರ ಪದಗ್ರಹಣಕ್ಕೆ ನಾನು ಹೋಗುವುದಿಲ್ಲ – ಸಿ. ಟಿ ರವಿ
………………. – ವಿ. ಸೋಮಣ್ಣ
ವಿಜಯೇಂದ್ರ ಬಗ್ಗೆ ನೋ ಕಾಮೆಂಟ್ಸ್ – ಬೆಲ್ಲದ್
ಬಿಎಲ್ ಸಂತೋಷ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಗಾಢ ಮೌನ, ಇಷ್ಟು ದಿನ #FamilyJanataParty ಒಡೆದ ಮನೆಯಾಗಿತ್ತು, ಇನ್ಮುಂದೆ ಯುದ್ಧಕಣವಾಗುವುದು ನಿಶ್ಚಿತ, ಸಂತೋಷ ಕೂಟ ರಣವಿಳ್ಯ ನೀಡಲು ತಯಾರಾಗುತ್ತಿದೆ! #BJPvsBJP ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಯಡಿಯೂರಪ್ಪನವರ ಪುತ್ರನ ಅಧ್ಯಕ್ಷ ಗಾದಿಯ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಿರುವುದಿಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ @CTRavi_BJP, ಸಿ.ಟಿ ರವಿಯ ಬಾಯಲ್ಲಿ ಬಂದಿದ್ದು ಕೇವಲ ಅವರೊಬ್ಬರ ಮಾತಲ್ಲ, ಇಡೀ ಸಂತೋಷ ಕೂಟದ ಅಸಹನೆಯ ಮಾತುಗಳು.
ನಾನು ಹಿಂದೂ ಹುಲಿ ಎನ್ನುತ್ತಿದ್ದ ಬಚ್ಚಲು ಬಾಯಿಯ @BasanagoudaBJP ಇಲಿಯಾಗಿ ಬಿಲ ಸೇರಿದ್ದಾರೆ, ಇತ್ತ ಸಿ.ಟಿ ರವಿ ಕುದಿಯುತ್ತಿರುವ ತಾಪ 100 ಡಿಗ್ರಿ ದಾಟಿದೆ ! @drashwathcn ಹತಾಶೆ ಮುಗಿಲು ಮುಟ್ಟಿದೆ. ಹೊಸ ಅಧ್ಯಕ್ಷರ ಪದಗ್ರಹಣವು ಬಿಜೆಪಿಗೆ “ಕೇತು ಗ್ರಹಣ”ವಾಗಿ ಪರಿಣಮಿಸುವುದು ನಿಶ್ಚಿತ!
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.















