ರಾಜಕೀಯ
ದೇವಸ್ಥಾನದ ಹಣ ಕೇವಲ ಹಿಂದೂ ಸಮೂದಾಯದ ಏಳಿಗೆಗೆ ಮಾತ್ರ ಬಳಕೆಯಾಗುತ್ತದೆ – ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುವಂತೆ ವಿಜಯೇಂದ್ರ ವಿಶ್ವಾಸಾರ್ಹತೆ ಕುಸಿಯುತ್ತಿದೆ ಎಂದ ಸಿದ್ದರಾಮಯ್ಯ : ದೇವಾಲಯದ ಹಣ ಸರ್ಕಾರಕ್ಕೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸ್ಪಷ್ಟನೆ
ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ.
ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ.
1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ.
ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:
(1). ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10
(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5
ಹಾಗೂ (3) ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.
ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:
(1) ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;
(2) ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
(3) ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.
ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ. ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.
ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆ ಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ. ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ.
ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ. ಇದೆಲ್ಲವನ್ನೂ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದು ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ.ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇದೇ ಕಾರಣಕ್ಕಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ. ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಡಾಲರ್ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ಅವರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟವಾಗಿದೆ.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.















