ಮಂಗಳೂರು
Mangaluru-ಬ್ರೇಕ್ ಫೇಲ್ ಆಗಿ ಅಡ್ಡಾದಿಡ್ಡಿ ಹೋದ ಬಸ್!; ಚಾಲಕನ ಸಮಯ ಪ್ರಜ್ಞೆಯಿಂದ ಮಂಗಳೂರಿನಲ್ಲಿ ತಪ್ಪಿದ ಅವಘಡ
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಬಸ್ ಒಂದರ ಬ್ರೇಕ್ ಫೇಲ್ ಆದಾಗ ಚಾಲಕ ತೋರಿದ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅವಘಡವೊಂದು ತಪ್ಪಿ ಹೋಗಿರುವ ಘಟನೆ ವರದಿಯಾಗಿದೆ.
ಕಂಕನಾಡಿಯಿಂದ ಆಕಾಶಭವನಕ್ಕೆ ಸಾಗುವ 60 ನಂಬರಿನ ಸಿಟಿ ಬಸ್ ಶನಿವಾರ ಬೆಳಗ್ಗೆ 8.45 ಸುಮಾರಿಗೆ ಕೊಂಟಾಡಿ ವಿದ್ಯಾ ಸ್ಕೂಲ್ ನ ಇಳಿಜಾರಿನ ಬಳಿ ಬ್ರೇಕ್ ಫೇಲ್ ಆಗಿರುವುದು ಚಾಲಕನ ಗಮನಕ್ಕೆ ಬಂದಿದೆ.
ಈ ವೇಳೆ ಡ್ರೈವರ್ ಗ್ಲೆನ್ ಸಿಕ್ವೇರಾ ವಿಚಲಿತರಾಗದೆ ಬಸ್ ಅನ್ನು ನಿಧಾನಕ್ಕೆ ಹಿಡಿತಕ್ಕೆ ತಂದು ನಿಲ್ಲಿಸುವ ತೀರ್ಮಾನಕ್ಕೆ ಬಂದು ಅದರಂತೆ ಕಾರ್ಯ ತತ್ಪರರಾದರು. ಈ ವೇಳೆ ಅವರು ಬಸ್ ನ ವೇಗವನ್ನು ನಿಯಂತ್ರಿಸುವ ಸಲುವಾಗಿ ಉದ್ದೇಶಪೂರ್ವಕವಾಗಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದರು. ಆದರೆ ಬಸ್ ನಿಲ್ಲಲಿಲ್ಲ.
ಗಾಬರಿಯಾದ ಪ್ರಯಾಣಿಕರು
ಈ ವೇಳೆ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿಲ್ಲದ ಬಸ್ ನ ಒಳಗಿದ್ದ ಪ್ರಯಾಣಿಕರು ಗಾಬರಿಯಿಂದ ಬೊಬ್ಬಿರಿಯಲು ಪ್ರಾರಂಭಿಸಿದರು. ಈ ವೇಳೆ ಸಂಯಮ ಕಳೆದುಕೊಳ್ಳದೆ ಡ್ವೈವರ್ ಗ್ಲೆನ್ ಅವರು ಬಸ್ ಅನ್ನು ಬಲಕ್ಕೆ ತಿರುಗಿಸಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದರು. ಇದರಿಂದ ಬಸ್ ನ ವೇಗ ನಿಯಂತ್ರಿಸಲ್ಪಟ್ಟಿತು. ಬಳಿಕ ನಿಧಾನವಾಗಿ ಬಸ್ ಸ್ಟಾಪ್ ಗೆ ಬಸ್ ತಲುಪಿಸುವಲ್ಲಿ ಗ್ಲೆನ್ ಯಶಸ್ವಿಯಾದರು.
ಸಾಮಾನ್ಯವಾಗಿ ವಾಹನದ ಬ್ರೇಕ್ ಫೇಲ್ ಆದಾಗ ಏನು ಮಾಡಬೇಕೆಂದು ಗೊತ್ತಿರದೆ, ಒಂದು ವೇಳೆ ಗೊತ್ತದ್ದರೂ ಆ ಕ್ಷಣದಲ್ಲಿ ಗಾಬರಿಯಾಗುವುದರಿಂದ ಅನಾಹುತಗಳಾಗುವುದೇ ಹೆಚ್ಚು. ಇನ್ನು ನಗರ ವ್ಯಾಪ್ತಿಯಲ್ಲಿ ವಾಹನ ಬ್ರೇಕ್ ಫೇಲ್ ಆದರೆ ಆಗಬಹುದಾದ ಅನಾಹುತದ ಪ್ರಮಾಣವನ್ನು ಊಹಿಸುವುದೂ ಅಸಾಧ್ಯ. ಆದರೆ ಈ ಘಟನೆಯಲ್ಲಿ ಯಾರೊಬ್ಬರಿಗೂ ಸಣ್ಣ ಗಾಯವೂ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿದರು ಗ್ಲೆನ್. ಅವರ ಸಮಯ ಪ್ರಜ್ಞೆಗೆ ಸಾರ್ವಜನಿಕ ವಲಯದಿಂದ ತೀವ್ರ ಪ್ರಶಂಸೆ ವ್ಯಕ್ತವಾಗಿದೆ.
3ನೇ ಟ್ರಿಪ್ ವೇಳೆ ಅವಘಡ
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಗ್ಲೆನ್ ಸಿಕ್ವೇರಾ ಅವರು, ಬಸ್ ಕೊಂಚಾಡಿಯ ಇಳಿಜಾರು ಪ್ರದೇಶದಲ್ಲಿ ಸಾಗುತ್ತಿದ್ದಂತೆ ಬ್ರೇಕ್ ಬೂಸ್ಟರ್ ನ ರಬ್ಬರ್ ಛಿದ್ರವಾಯಿತು. ಇದು ಗಮನಕ್ಕೆ ಬಂದ ತಕ್ಷಣವೇ ಅಲರ್ಟ್ ಆದೆ. ಇದೇ ರಸ್ತೆಯಲ್ಲಿ ನಾನು ದಿನದ ಎರಡು ಟ್ರಿಪ್ ಮಾಡಿ ಮೂರನೇ ಟ್ರಿಪ್ ಮಾಡುವಾಗ ಈ ರೀತಿ ಆಯಿತು. ಮೊದಲೆರಡು ಬಾರಿಯ ಟ್ರಿಪ್ ನಲ್ಲೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಮೂರನೇ ಟ್ರಿಪ್ ವೇಳೆ ಮಾತ್ರ ಪರಿಸ್ಥಿತಿ ಕೈ ಕೊಟ್ಟಿತು. ಆದಷ್ಟು ಬೇಗನೇ ವಾಹನದ ವೇಗ ಕಡಿಮೆಗೊಳಿಸಿ ನಿಲ್ಲಿಸುವುದು ನನ್ನ ಉದ್ದೇಶವಾಗಿತ್ತು.
ಹೀಗಾಗಿಯೇ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್ ಮತ್ತು ರೋಡ್ ಡಿವೈಡರ್ ಗೆ ಗುದ್ದಿದೆ. ಇದರಿಂದ ಬಸ್ ನ ವೇಗ ಕಡಿಮೆಯಾಗಿ ನಿಲ್ಲಿಸಲು ಸಾಧ್ಯವಾಯಿತು. ಒಂದು ವೇಳೆ ಅದೇ ವೇಗದಲ್ಲಿ ಬಸ್ ರಸ್ತೆಯಲ್ಲಿ ಮುಂದಕ್ಕೆ ಚಲಿಸಿದ್ದಿದ್ದರೆ ದೊಡ್ಡ ಮಟ್ಟಿನ ಅನಾಹುತ ಆಗುವ ಸಾಧ್ಯತೆಗಳು ಹೆಚ್ಚಾಗಿದ್ದವು.
ಮುಂದೆ ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದರು. ಬಹಳಷ್ಟು ವಾಹನಗಳೂ ಇದ್ದವು. ಆದರೆ ದೇವರ ದಯೆಯಿಂದಾಗಿ ಯಾವುದೇ ರೀತಿಯ ಗಾಯಗಳಾಗಿಲ್ಲ. ಎಲ್ಲರನ್ನೂ ದೇವರೇ ಬಂದು ಕಾಪಾಡಿದ ಎಂದು ಚಾಲಕ ಗ್ಲೆನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
ಅಪರಾಧ19 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ24 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ24 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ24 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ನಿಧನ ವಾರ್ತೆ17 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ















