Uncategorized
ಬಜರಂಗ ದಳದ ಮುಖಂಡನಿಂದ ಹತ್ಯೆಯಾದ ಬಡ ದಲಿತ ಕುಟುಂಬಕ್ಕೆ ಸರಕಾರ 25 ಲ.ರೂ ಪರಿಹಾರ ಕೊಡಬೇಕು : ವಸಂತ ಬಂಗೇರ | ಕೇಸ್ ನೀಡದಂತೆ ಆರೋಪಿ ಸಹೋದರ ಒತ್ತಡ ಹಾಕಿದ್ದ : ಮೃತನ ತಾಯಿ
ಮಂಗಳೂರು, ಫೆ.26: ಬೆಳ್ತಂಗಡಿ ತಾಲೂಕಿನ ಕನ್ಯಾಡಿಯಲ್ಲಿ ದಲಿತ ಕೂಲಿ ಕಾರ್ಮಿಕ ದಿನೇಶ್
ಎಂಬವರನ್ನು ಬಜರಂಗದಳ ಮುಖಂಡ ಕೃಷ್ಣ ಯಾನೆ ಕಿಟ್ಟ ಎಂಬಾತ ಅಟ್ಟಾಡಿಸಿ ಹೊಡೆದು , ಆಯಕಟ್ಟಿನ ಜಾಗಕ್ಕೆ ತುಳಿದು ಹತ್ಯೆ ಮಾಡಿದ್ದಾನೆ. ಆರೋಪಿಯು ದಿನೇಶ್ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ಹಾಗೂ ಕಾಂಗ್ರೇಸ್ ಮುಖಂಡ ವಸಂತ ಬಂಗೇರ ಆರೋಪಿಸಿದ್ದಾರೆ.
ಅವರು ಶನಿವಾರ ಸಂಜೆ ಮಂಗಳೂರಿನ ಕಾಂಗ್ರೇಸ್ ಕಛೇರಿ ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಹಿಂದೂವಾಗಿರುವ ದಿನೇಶ್ ಹತ್ಯೆ ಫೆ. 25ರಂದು ನಸುಕಿನ ವೇಳೆ 2 ಗಂಟೆಗೆ ಆಗಿದ್ದು, ಅದರೆ ಇದರ ಬಗ್ಗೆ ಹಿಂದೂ ಧರ್ಮದ ರಕ್ಷಕರೆಂದು ಪೋಸ್ ಕೊಡುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಒಂದಕ್ಷರ ಮಾತಾಡಿಲ್ಲ ಎಂದು ಅವರು ಕಟಕಿಯಾಡಿದರು.
ಹತ್ಯೆ ಆರೋಪಿ ಕೃಷ್ಣ ಅಲಿಯಾಸ್ ಕಿಟ್ಟಿ ಬಜರಂಗದಳ ಜಿಲ್ಲಾ ಪ್ರಖಂಡದ ಸಂಚಾಲಕ ಭಾಸ್ಕರ್ ಧರ್ಮಸ್ಥಳ ಸಹೋದರ. ಇವರು ಒಟ್ಟು ಆರು ಸಹೋದರರಿದ್ದು ಅವರ ಪೈಕಿ ಮೂವರು ಪೋಕರಿಗಳು ಎಂದರು . ಇವರು ಧರ್ಮಸ್ಥಳ ಭಾಗದಲ್ಲಿ ಅಕ್ರಮ ಮರಳು ದಂಧೆ, ಅಕ್ರಮ ಗೋ ಸಾಗಾಟ , ದನದ ಮಾಂಸ ಮಾರಾಟ ಇತ್ಯಾದಿ ಅಕ್ರಮ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

25 ಲಕ್ಷ ಪರಿಹಾರಕ್ಕೆ ಆಗ್ರಹ :
ದಿನೇಶ್ ಕುಟುಂಬ ಕಡು ಬಡ ಕುಟುಂಬವಾಗಿದ್ದು ಪತ್ನಿ, ಮೂವರು ಮಕ್ಕಳು ಹಾಗೂ ವೃದ್ದ ತಾಯಿಯ ಜೀವನಾಧಾರ ಅವರೇ ಆಗಿದ್ದರು. ಹೀಗಾಗಿ ರಾಜ್ಯ ಸರ್ಕಾರ ಆ ಕುಟುಂಬಕ್ಕೆ ತಕ್ಷಣ ಕನಿಷ್ಠ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಬಂಗೇರ ಆಗ್ರಹಿಸಿದ್ದಾರೆ.
ಹಿಂದೂಗಳ ಹತ್ಯೆ ಸಂದರ್ಭ ರಾಜಕೀಯ ಮಾಡುವ ಬಿಜೆಪಿಯವರು ಈ ಕೊಲೆಯ ಬಗ್ಗೆ ಏಕೆ ಮೌನ ವಹಿಸಿದ್ದಾರೆ? ಬಿಜೆಪಿಯ ಹಿಂದೂಪರ ಎನ್ನುವ ನಿಲುವು ಈಗ ಎಲ್ಲಿ ಹೋಯಿತು? ಕಾಂಗ್ರೇಸ್ ಅವರನ್ನು ಹಿಂದೂ ವಿರೋಧಿ ಎನ್ನುವ ಬಿಜೆಪಿಯವರು ದಲಿತರ ಬಗ್ಗೆ ಅಸಡ್ಡೆ ತೋರಿಸಿದ್ದಾರೆ. ಇದ್ಯಾವ ರೀತಿಯ ಹಿಂದುತ್ವ ಎಂದು ಬಂಗೇರ ಪ್ರಶ್ನಿಸಿದರು.
ದಿನೇಶ್ ಹತ್ಯೆಯ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಗಿದೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗುವುದು ಎಂದು ಅವರು ತಿಳಿಸಿದರು.
ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿರುವುದು ಸಮಾಧಾನ ತರಿಸಿದೆ. ಮೃತ ದಿನೇಶ್ ಅವರ ಕುಟುಂಬಕ್ಕೆ ಕಾಂಗ್ರೆಸ್ನಿಂದ ನಿಧಿ ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಕೇಸ್ ಮಾಡದಂತೆ ಒತ್ತಡ
ದಿನೇಶ್ ಅವರ ತಾಯಿ ಪದ್ಮಾವತಿ ಮಾತನಾಡಿ, ಆರೋಪಿ ಕೃಷ್ಣ ಜಾಗದ ವಿಚಾರ ಎತ್ತಿ ನನ್ನ ಮಗನಿಗೆ ದೊಣ್ಣೆಯಿಂದ ಹೊಡೆದು ಒದ್ದು ತೀವ್ರ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಕೃಷ್ಣನ ಸಹೋದರ ಎಫ್ಐಆರ್ ದಾಖಲಿಸದಂತೆ ಬೆದರಿಕೆ ಹಾಕಿದ್ದ. ಆದರೂ ದೂರು ದಾಖಲಿಸಿದ್ದೇನೆ. ಈ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಕಣ್ಣೀರು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ, ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಕೇಶವ್ ಪಿ., ಮನೋಹರ್ ಕುಮಾರ್ ಮತ್ತಿತರರಿದ್ದರು.
ಕೊಲೆಯಾದ ದಿನೇಶ್ ತಾಯಿಯನ್ನು ಭೇಟಿಯಾದ ಸಿದ್ದರಾಮಯ್ಯ
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















