ರಾಜಕೀಯ
State BJP leaders-ರೂ.330 ಕ್ಕೆ ಲಭ್ಯವಿದ್ದ ಪಿಪಿಇ ಕಿಟ್ 2117 ಕ್ಕೆ ಚೀನಾದಿಂದ ಖರೀದಿ..! ಒಟ್ಟು 7200 ಕೋಟಿ ರೂ ಹಗರಣ..! ಮಧ್ಯಂತರ ವರದಿಯಾಧರಿಸಿ ಕೊರೋನಾ ಅವ್ಯವಹಾರದ ತನಿಖೆಗೆ ಎಸ್.ಐ.ಟಿ ರಚನೆಗೆ ಸಚಿವ ಸಂಪುಟದಲ್ಲಿ ತೀರ್ಮಾನ : ರಾಜ್ಯ ಬಿಜೆಪಿ ನಾಯಕರಿಗೆ ನಡುಕ..!
ಕೊರೋನಾ ಸಂದರ್ಭದಲ್ಲಿ ನಡೆದ ಅವ್ಯವಹಾರದ ಬಗ್ಗೆ ಸತ್ಯ ಶೋಧನೆಯಾಗಿದ್ದು, ನ್ಯಾ. ಮೈಕಲ್.ಡಿ.ಕುನ್ಹಾ ಅವರು ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ದೊರೆತಿರುವ ಮಾಹಿತಿ, ದಾಖಲೆಗಳನ್ನು ಆಧರಿಸಿ ಮುಂದಿನ ಕ್ರಮಕ್ಕಾಗಿ ರಾಜ್ಯ ಸರ್ಕಾರ ಎಸ್.ಐ.ಟಿ ಯನ್ನು ರಚಿಸಬೇಕು ಎಂದು ಸಚಿವ ಸಂಪುಟ ತೀರ್ಮಾನಿಸಿದೆ.
ಬೆಂಗಳೂರು : ಕೊರೋನಾ ಸಂದರ್ಭದಲ್ಲಿ ನಡೆದ ಅವ್ಯವಹಾರದ ಬಗ್ಗೆ ಸತ್ಯ ಶೋಧನೆಯಾಗಿದ್ದು, ನ್ಯಾ. ಮೈಕಲ್.ಡಿ.ಕುನ್ಹಾ ಅವರು ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ದೊರೆತಿರುವ ಮಾಹಿತಿ, ದಾಖಲೆಗಳನ್ನು ಆಧರಿಸಿ ಮುಂದಿನ ಕ್ರಮಕ್ಕಾಗಿ ರಾಜ್ಯ ಸರ್ಕಾರ ಎಸ್.ಐ.ಟಿ ಯನ್ನು ರಚಿಸಬೇಕು ಎಂದು ಸಚಿವ ಸಂಪುಟ ತೀರ್ಮಾನಿಸಿದೆ.
ಕೋವಿಡ್ ಅವ್ಯವಹಾರ ಕ್ರಮಗಳಲ್ಲಿ ಅಪರಾಧಿ ಅಂಶಗಳನ್ನು ತನಿಖೆ ಮಾಡಿ ಎಫ್.ಐ.ಆರ್, ದೋಷಾರೋಪ ಪಟ್ಟಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಶಿಕ್ಷೆಗೆ ಅಭಿಯೋಜನೆಗೆ ಒಳಪಡಿಸುವ ಮೂಲಕ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಇಂದು ಸಚಿವ ಸಂಪುಟ ಸಭೆಯ ನಂತರ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.
ಶೀಘ್ರದಲ್ಲಿಯೇ ಎಸ್.ಐ.ಟಿ ಅಧಿಕಾರಿಗಳ ನೇಮಕದ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದರು. ಅಗತ್ಯವಿದ್ದಲ್ಲಿ ಎಫ್.ಐ.ಆರ್ ಹಾಕಿ ತನಿಖೆ ಕೈಗೊಳ್ಳಬಹುದು ಎಂದರು. ಆಯೋಗದ ಮುಂದುವರೆದ ಕ್ರಮವಾಗಿ ಎಸ್.ಐ.ಟಿ ರಚಿಸಲಾಗುವುದು ಎಂದರು.
ಕೋವಿಡ್ 19 ಸಂದರ್ಭದಲ್ಲಿ ಅಂದಿನ ಸರ್ಕಾರ ಅತ್ಯಂತ ಅಮಾನವೀಯವಾಗಿ ಜನರ ರಕ್ಷಣೆ ಮಾಡಬೇಕಾದ ಸಂದರ್ಭದಲ್ಲಿ ಭ್ರಷ್ಟಾಚಾರ, ಬೇಜವಾಬ್ದಾರಿತನ, ಜನರಿಗೆ ಮೋಸ, ಮಾಹಿತಿ/ವಿಷಯಗಳನ್ನು ಜನರಿಂದ ಮುಚ್ಚಿಡುವುದು, ಕಾಗದಗಳನ್ನು ಸಿಗದ ಹಾಗೇ ಮಾಡುವುದು ಮಾತ್ರವಲ್ಲದೇ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸಿ ಭ್ರಷ್ಟಾಚಾರವನ್ನು ಯಾರ ಗಮನಕ್ಕೂ ಬಾರದಂತೆ ಮಾಡುವ ದೊಡ್ಡ ಪ್ರಯತ್ನವಾಗಿತ್ತು. ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯ ವಾತಾವರಣ ನಿರ್ಮಾಣ ಮಾಡಲಾಯಿತು. 330 ರೂ.ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ 2117 ರೂಪಾಯಿಗೆ ಲಕ್ಷಾಂತರ ಕಿಟ್ ಗಳನ್ನು ಚೀನಾದಿಂದ ತರಿಸಲಾಗಿದೆ. ಸಮಯ ಮೀರಿದ ಔಷಧಿಗಳನ್ನು ಖರೀದಿಸುವುದು, ಔಷಧಿಗಳನ್ನು ಮೂರು ಪಟ್ಟು ಹೆಚ್ಚು ಬೆಲೆಗೆ ಕೊಳ್ಳುವುದು, ಕಪ್ಪುಪಟ್ಟಿಗೆ ಸೇರಿದ ಕಂಪನಿಗಳಿಂದ ವ್ಯವಹಾರ, ಕೆಲವು ಸಂದರ್ಭದಲ್ಲಿ ದೇಣಿಗೆ ನೀಡಿದಂತೆ ಹೇಳಿ ಅದರ ಮೇಲೆ ಹಣ ಪಾವತಿ ಮಾಡಿರುವ ಕೆಲಸಗಳಾಗಿವೆ ಎಂದರು. ಒಟ್ಟು 7200 ಕೋಟಿ ರೂ ಗೂ ಮಿಕ್ಕಿ ಹಗರಣ ನಡೆದಿರುವುದು ಕಂಡುಬಂದಿದೆ.
ಆರು ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ಸಿಬಿಐ ನಿರಾಕರಣೆ: ತನಿಖೆಗೆ ತೀರ್ಮಾನ
ಸಿ.ಬಿ.ಐ ತನಿಖೆಗೆ ವಹಿಸಿದ 09 ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ 06 ಪ್ರಕರಣಗಳಲ್ಲಿ ತನ್ನಿಂದ ತನಿಖೆ ಸಾಧ್ಯವಿಲ್ಲವೆಂದು ಸಿ.ಬಿ.ಐ ತಿಳಿದೆ. ಈ 06 ಪ್ರಕರಣಗಳನ್ನು ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ವಹಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಚಿವ ಎಚ್.ಕೆ ಪಾಟೀಲ ತಿಳಿಸಿದರು.
ಗೋವಾದ ಮರ್ಮಗೋವಾ ಮತ್ತು ಪಣಜಿ, ತಮಿಳುನಾಡಿನ ಎನ್ನೋರ್ ಮತ್ತು ಚೆನ್ನೈ, ಕರ್ನಾಟಕದ ನವ ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ ಹಾಗೂ ಆಂಧ್ರ ಪ್ರದೇಶದ ಕೃಷ್ಣ ಪಟ್ಟಣಂ, ಕಾಕಿನಾಡ ಮತ್ತು ವಿಶಾಖಪಟ್ಟಣಂ ಬಂದರುಗಳಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಗಳನ್ನು ಸಿ.ಬಿ.ಐ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ ಆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ನಿರ್ಣಯಿಸಲಾಗಿದೆ ಎಂದರು.
ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಗಳಿಂದ ವಶಪಡಿಸಿಕೊಳ್ಳಲಾಗಿದ್ದ 5-6 ಪ್ರಕರಣಗಳನ್ನು ತನಿಖೆ ಮಾಡಲು ಸೂಕ್ತ ಕ್ರಮ ವಹಿಸಬೇಕು. ಬೇಲೇಕೇರಿ ರೀತಿಯಲ್ಲಿಯೇ ಮದ್ರಾಸ್ ಬಂದರಿನಲ್ಲಿ ಇದ್ದ ಅದಿರನ್ನು ಕದ್ದು ರಫ್ತು ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರಿಸಿ ಮುಂದಿನ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಯಿತು. ಈ ಬಗ್ಗೆ ವಿವರಗಳನ್ನು ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸಲು ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಅಕ್ರಮ ಗಣಿಗಾರಿಕೆ :
ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ʼಸಿʼ ವರ್ಗದ 10 ಗಣಿ ಗುತ್ತಿಗೆದಾರರ ಪ್ರಕರಣಗಳನ್ನು ಸಹ ಈಗಿನ ಎಸ್.ಐ.ಟಿ ತನಿಖೆಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಮೆ|| ಮೈಸೂರು ಮ್ಯಾಂಗನೀಸ್ ಕಂಪನಿ, ಮೆ|| ಎಂ.ದಶರಥ ರಾಮಿ ರೆಡ್ಡಿ,
ಮೆ|| ಅಲ್ಲಂ ವೀರಭದ್ರಪ್ಪ, ಮೆ|| ಕರ್ನಾಟಕ ಲಿಂಪೊ, ಮೆ|| ಅಂಜನಾ ಮಿನರಲ್ಸ್, ಮೆ|| ರಾಜೀಯ ಖಾನುಂ, ಮೆ|| ಮಿಲನ ಮಿನರಲ್ಸ್ (ಮಹಾಲಕ್ಷಿ & ಕಂ), ಮೆ|| ಎಂ.ಶ್ರೀನಿವಾಸುಲು, ಮೆ|| ಚನ್ನಕೇಶವ ರೆಡ್ಡಿ (ಲಕ್ಷ್ಮೀನರಸಿಂಹ ಮೈನಿಂಗ್ ಕಂಪನಿ ಮತ್ತು ಮೆ|| ಜಿ.ರಾಯಶೇಖರ್ ಕಂಪನಿಗಳು ಅಕ್ರಮ ಗಣಿಗಾರಿಕೆಗಳು ಮಂಜೂರಾದ ಗುತ್ತಿಗೆ ಪ್ರದೇಶದ ಹೊರಗೆ ಶೇ.10 ಕ್ಕಿಂತ ಹೆಚ್ಚು ಗಣಿಗಾರಿಕೆ ಹೊಂಡಗಳು ಮತ್ತು ಮಂಜೂರಾದ ಗುತ್ತಿಗೆಗಿಂತ ಹೆಚ್ಚು ಎಂದು ಕಂಡುಬಂದಿರುವ ಹಿನ್ನೆಲೆಯಲ್ಲಿ ಮತ್ತು ಅರಣ್ಯ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆಯಲ್ಲಿ ತೊಡಗಿರುವ ಗುತ್ತಿಗೆಗಳು ಮತ್ತು ಇತರೆ ಗುತ್ತಿಗೆ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದನ್ನು ಒಳಗೊಂಡಿರುತ್ತದೆ. ಆದ್ದರಿಂದ ಈ ಮೇಲ್ಕಂಡ ಕಂಪನಿಗಳ ಗಣಿ ಗುತ್ತಿಗೆಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಸಂಬಂಧ ಮಾನ್ಯ ಲೋಕಾಯುಕ್ತದ ವಿಶೇಷ ತನಿಖಾ ದಳಕ್ಕೆ ವಹಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವರು ವಿವರಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.















