ಬೆಂಗಳೂರು
Accident-ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐರಾವತ ಬಸ್ – ಕಾರು ನಡುವೆ ಅಪಘಾತದಿಂದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃ*ತ್ಯು
ಗುರುವಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಕಣ್ಣೀರಿನ ಕಥೆಯೊಂದಕ್ಕೆ ಸಾಕ್ಷಿಯಾಯಿತು. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ, ವೇಗದ ಜಗತ್ತಿನಲ್ಲಿ ನಡೆದ ಒಂದು ಕ್ಷಣದ ಗೊಂದಲ, ನಾಲ್ಕು ಜೀವಗಳನ್ನು ಬಲಿ ತೆಗೆದುಕೊಂಡಿತು.
ಮಂಡ್ಯ: ಗುರುವಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಕಣ್ಣೀರಿನ ಕಥೆಯೊಂದಕ್ಕೆ ಸಾಕ್ಷಿಯಾಯಿತು. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ, ವೇಗದ ಜಗತ್ತಿನಲ್ಲಿ ನಡೆದ ಒಂದು ಕ್ಷಣದ ಗೊಂದಲ, ನಾಲ್ಕು ಜೀವಗಳನ್ನು ಬಲಿ ತೆಗೆದುಕೊಂಡಿತು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ನಡೆದಿದ್ದು, ಕಾರು ಮತ್ತು ಐರಾವತ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ನಡೆದಿದೆ.
ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು ಎಂದು ತಿಳಿದು ಬಂದಿದೆ.
ಎಕ್ಸ್‌ಪ್ರೆಸ್ ವೇ ನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿ ಮತ್ತೆ ಎಕ್ಸ್‌ಪ್ರೆಸ್ ವೇಗೆ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.


















